ವಿಜಯಪುರ: ಎಲ್ಲರಿಗೂ ಕಾನೂನು ಒಂದೇ, ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ ಎಂದು ಮುಖ್ಯಮಂತಿ ಸಿದ್ದರಾಮಯ್ಯ ಹೇಳಿದರು.
ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಸಂದರ್ಭದಲ್ಲಿ ನಡೆದ ಲಾಠಿಪ್ರಹಾರ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ೧೪ ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಸಮರ್ಥಿಸಿಕೊಂಡಿದ್ದಾರೆ.
ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಪಂಚಮಸಾಲಿ ಸಮುದಾಯದವರು ಪ್ರವರ್ಗ ೨ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಸಿಎಂ ಮನವಿ ಮಾಡಿದರು.
ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದ ಮುಖ್ಯಮಂತ್ರಿಗಳು, ಕಾನೂನಿನ ಮುಂದೆ ಎಲ್ಲರೂ ಸಮಾನರು, ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ ಎಂದು ಸಿದ್ದರಾಮಯ್ಯ ಹೇಳಿದರು.
ಪ್ರವರ್ಗ ೨ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು ೨ ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ‍್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ‍್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.
ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವ ಫೋಟೋಗಳಿವೆ. ಸ್ವಾಮೀಜಿ ಅವರು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ೧೦ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ಸಿಎಂ ಎಂದು ಪ್ರಶ್ನಿಸಿದರು.
ಪಂಚಮಸಾಲಿ ಹೋರಾಟವನ್ನು ಟ್ರ‍್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದAತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ ೨ಎ ೨ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು ೨ಬಿ ಯಲ್ಲಿರುವ ೪% ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
More Stories
ಸದನದೊಳಗಿನ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಸಿಟಿ ರವಿ ವಿರುದ್ಧ ಕಾನೂನು ಹೋರಾಟ: ಲಕ್ಷ್ಮಿ ಹೆಬ್ಬಾಳಕರ
ಕಾಂಗ್ರೆಸ್ ಆರೋಪ ಸುಳ್ಳು: ಆತ್ಮಸಾಕ್ಷಿ ವಿರುದ್ಧ ನಡೆದುಕೊಂಡಿಲ್ಲ: ಸಿ ಟಿ ರವಿ