riseofgadag.com

ಕನ್ನಡ ಜನಮನದ ಜೀವನಾಡಿ

ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಅಶ್ಲೀಲ ಪದ ಬಳಕೆ ವಿರೋಧಿಸಿ ಪ್ರತಿಭಟನೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಗುರುವಾರ ಹೈಡ್ರಾಮ ನಡೆಯಿತು.

ಪರಿಷತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾದ ಹೇಳಿಕೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸಿ.ಟಿ.ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಎನ್ನಲಾಗಿರುವ ವ್ಯಕ್ತಿಗಳು ಸುವರ್ಣ ಸೌಧದ ಒಳಗಡೆ ಬಂದು ಸಿ.ಟಿ. ರವಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ೧೦ ರಿಂದ ೧೫ ಜನರು ಗುಂಪು ಸಿ.ಟಿ ರವಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಗೇಟ್ ಒಳಗಡೆ ನುಗ್ಗಲು ಯತ್ನಿಸಿದರು. ಗೇಟ್ ಒಳಗಡೆ ಇದ್ದ ಸಿ.ಟಿ. ರವಿ ಮೇಲೆ ಹಲ್ಲೆಗೆ ಯತ್ನ ನಡೆಯಿತು ಎಂಬ ಆರೋಪ ಕೇಳಿ ಬಂದಿದೆ.

ಗೇಟ್ ತಳ್ಳಿ ಒಳನುಗ್ಗಲು ಯತ್ನ ನಡೆಸಿದ ಗುಂಪನ್ನು ಈ ವೇಳೆ ಮಾರ್ಷಲ್‌ಗಳು ತಡೆದರು. ಇದೇ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಮತ್ತೊಂದು ಕಡೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭಾಪತಿಗೆ ದೂರು ನೀಡಿದ್ದಾರೆ. ಸದನ ನಡೆಯುತ್ತಿರುವಾಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸುವರ್ಣಸೌಧದ ಕಾರಿಡಾರ್‌ಗೆ ನುಗ್ಗಿ ದಾಂಧಲೆ ನಡೆಸಿ ಸಿ.ಟಿ.ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸದನ ನಡೆಯುತ್ತಿರುವಾಗಲೇ ಪೂರ್ವ ಕಾರಿಡಾರ್‌ಗೆ ಜನರು ಆಗಮಿಸಿರುವುದು ಭದ್ರತಾ ವೈಫಲ್ಯವಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555