ಗದಗ: ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ.ಜಾ/ಪ.ಪಂ. ಉಪಹಂಚಿಕೆ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆಯಿರಬೇಕು. ತಾಲೂಕು ಮಟ್ಟದಲ್ಲಿ ಎಸ್‌ಸಿಪಿ/ ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯನ್ನು ನಿಯಮಿತವಾಗಿ ಜರುಗಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ಶೀಘ್ರಗತಿಯಲ್ಲಿ ತಲುಪುವಂತಾಗಬೇಕು.ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ಸದರಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಇಲಾಖಾವಾರು ಸಾಧಿಸಿದ ಪ್ರಗತಿ ವಿವರವನ್ನು ಇಲಾಖೆ ಅಂತರ್ಜಾಲದಲ್ಲಿ ತಪ್ಪದೇ ಅಪ್‌ಡೇಟ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ ಇಲಾಖೆಯ ವಿವಿಧ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರೀಯೆಯನ್ನು ಆದಷ್ಟು ಬೇಗನೆ ಅಂತಿಮಗೊಳಿಸ ಬೇಕು ಮತ್ತು ಇಲಾಖೆಗಳಿಂದ ಟೆಂಡರ್,ಕೋಟೆಶನ್ಗಳನ್ನು ನಿಯಮಿತ ಸಮಯದೊಳಗೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪ ಹಂಚಿಕೆ (ಎಸ್‌ಸಿಎಸ್‌ಪಿ) ಯೋಜನೆಯಡಿ ಅಕ್ಟೋಬರ್ 2024 ರ ಅಂತ್ಯದವರೆಗೆ ವಿವಿಧ ಇಲಾಖೆಗಳಡಿ ಒಟ್ಟಾರೆ 5134.52 ಲಕ್ಷ ರೂ.ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 3906.48 ಲಕ್ಷ ರೂ.ಖರ್ಚಾಗಿದೆ. 37707 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು ಶೇ.76 ರಷ್ಟು ಪ್ರಗತಿಯಾಗಿದೆ. ಪರಿಶಿಷ್ಟ ಪಂಗಡ ಉಪಹಂಚಿಕೆ (ಟಿಎಸ್‌ಪಿ) ಯೋಜನೆಯಡಿ ವಿವಿಧ ಇಲಾಖೆಗಳಡಿ 1372.46 ಲಕ್ಷ ರೂ.ಬಿಡುಗಡೆಯಾಗಿದ್ದು ಆ ಪೈಕಿ 983.07 ಲಕ್ಷ ರೂ. ಖರ್ಚಾಗಿದೆ. 16722 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿದ್ದು ಶೇ. 72 ರಷ್ಟು ಪ್ರಗತಿಯಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ನಗರಾಭಿವೃದ್ಧಿ ಕೋಶ, ತೋಟಗಾರಿಕೆ, ಹೆಸ್ಕಾಂ, ಕೌಶಲ್ಯಾಭಿವೃದ್ಧಿ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ಸೇರಿದಂತೆ ವಿವಿಧ ಇಲಾಖೆಯ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ ಕೊಟ್ಟೂರ,ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್ ಎಸ್ ಬುರಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
More Stories
ನೀರಿನ ಟ್ಯಾಂಕರ್ ಚಕ್ರ ತಲೆ ಮೇಲೆ ಹರಿದು ೨ ವರ್ಷದ ಮಗು ಸಾವು
ಜಿಪಂ ಎಸ್ಡಿಎ ಲಕ್ಷ್ಮಣ ಕರ್ಣೆ ಮನೆ ಮೇಲೆ ಲೋಕಾ ದಾಳಿ